ChatGPT Image Oct 3, 2026, 08_41_04 PM-modified
GREATER BENGALURU NEWS 9
Bribe

Greater Bengaluru News9 : ಹುಟ್ಟು ಮೂಕನಾಗಿರುವ ವೃದ್ಧ ತಂದೆಗೆ ಅಂಗವಿಕಲ ವೇತನ ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್‌ಗೆ 4 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 40 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ನಾಡಕಚೇರಿಯ ಉಪ ತಹಶೀಲ್ದಾರ್ ಪುಷ್ಪಲತಾ ಶಿಕ್ಷೆಗೆ ಗುರಿಯಾದ ಭ್ರಷ್ಟ ಅಧಿಕಾರಿ.

ಘಟನೆಯ ವಿವರ:
ಭದ್ರಾವತಿ ತಾಲೂಕಿನ ಡಿ.ಬಿ. ಹಳ್ಳಿ ನಿವಾಸಿ ಗಿರೀಶ್ ಎಂಬುವರು ಹುಟ್ಟು ಮೂಕರಾಗಿದ್ದ ತಮ್ಮ ತಂದೆಗೆ ಸರ್ಕಾರದ ಅಂಗವಿಕಲ ಪಿಂಚಣಿ ಸೌಲಭ್ಯ ಮಾಡಿಸಿಕೊಡುವಂತೆ ಕೋರಿ ಕಲ್ಲಿಹಾಳ್ ನಾಡಕಚೇರಿಗೆ ತೆರಳಿದ್ದರು. ಈ ವೇಳೆ ಉಪ ತಹಶೀಲ್ದಾರ್ ಪುಷ್ಪಲತಾ ಅವರು ಕೆಲಸ ಮಾಡಿಕೊಡಲು ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಲಂಚ ನೀಡಲು ಇಷ್ಟವಿಲ್ಲದ ಗಿರೀಶ್ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ 2017ರ ಸೆಪ್ಟೆಂಬರ್ 21ರಂದು ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್ ಅವರಿಂದ ಮುಂಗಡವಾಗಿ ₹5,000 ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಪುಷ್ಪಲತಾ ಅವರನ್ನು ರೆಡ್‌ಹ್ಯಾಂಡ್‌ ಆಗಿ ವಶಕ್ಕೆ ಪಡೆದಿದ್ದರು.

ಸಾಬೀತಾದ ಆರೋಪ, ನ್ಯಾಯಾಲಯದ ತೀರ್ಪು:
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಹೆಚ್.ಎಸ್. ತಿಪ್ಪೇಸ್ವಾಮಿ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯವು, ಆರೋಪಿಯ ಮೇಲಿನ ಲಂಚ ಸ್ವೀಕಾರ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷ ಜೈಲು ಶಿಕ್ಷೆ ಮತ್ತು ₹40,000 ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕ ಸುಂದರ್ ರಾಜ್ ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *