ChatGPT Image Oct 3, 2026, 08_41_04 PM-modified
GREATER BENGALURU NEWS 9
Ramya Darshan

Greater Bengaluru News9 : ಸ್ಯಾಂಡಲ್‌ವುಡ್‌ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಾಚ್ಯ ಪದಗಳಿಂದ ನಿಂದಿಸಿ ಸಂದೇಶ ಕಳುಹಿಸಿದ್ದ ಪ್ರಕರಣದ ವಿಚಾರಣೆ ಬೆಂಗಳೂರಿನ 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ವೇಳೆ ನ್ಯಾಯಾಲಯಕ್ಕೆ ವಿಚಾರಣೆಗೆ ಆಗಮಿಸಿದ್ದ ರಮ್ಯಾ ಅವರ ಮುಂದೆ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರಿಟ್ಟು ಕ್ಷಮೆಯಾಚಿಸಿದ ಘಟನೆ ನಡೆದಿದೆ. ಆದರೆ, ಆರೋಪಿಗಳನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ರಮ್ಯಾ ಸ್ಪಷ್ಟವಾಗಿ ಹೇಳಿದ್ದಾರೆ.

ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಆರೋಪಿಗಳು ಕೋರ್ಟ್‌ ಆವರಣದಲ್ಲಿ ರಮ್ಯಾ ಅವರ ಕಾಲಿಗೆ ಬಿದ್ದು, ‘ಇದೊಂದು ಬಾರಿ ಕ್ಷಮಿಸಿಬಿಡಿ, ನಮ್ಮಿಂದ ದೊಡ್ಡ ತಪ್ಪಾಗಿದೆ’ ಎಂದು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಳೆದ ವಿಚಾರಣೆಯ ವೇಳೆಯೂ ಆರೋಪಿಗಳು ಪ್ರಕರಣವನ್ನು ವಾಪಸ್ ಪಡೆಯುವಂತೆ ರಮ್ಯಾ ಅವರಲ್ಲಿ ಮನವಿ ಮಾಡಿದ್ದರು. ಇದೀಗ ಈ ಬಾರಿ ಆರೋಪಿಗಳ ಕುಟುಂಬಸ್ಥರೂ ಕೂಡ ರಮ್ಯಾ ಅವರನ್ನು ಭೇಟಿಯಾಗಿ ಪ್ರಕರಣವನ್ನು ಇಲ್ಲಿಗೇ ಮುಕ್ತಾಯಗೊಳಿಸುವಂತೆ ವಿನಂತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆದರೆ, ಆರೋಪಿಗಳ ಕ್ಷಮೆಯಾಚನೆಯನ್ನು ರಮ್ಯಾ ಕಟ್ಟುನಿಟ್ಟಾಗಿ ತಿರಸ್ಕರಿಸಿದ್ದು, ತಮ್ಮ ನಿಲುವಿನಲ್ಲಿ ಯಾವುದೇ ಸಡಿಲಿಕೆ ತೋರಿಲ್ಲ ಎನ್ನಲಾಗಿದೆ. ಕೈಯಲ್ಲಿ ಮೊಬೈಲ್ ಇದೆ, ಇಂಟರ್‌ನೆಟ್ ಸಿಗುತ್ತದೆ ಎಂಬ ಕಾರಣಕ್ಕೆ ಯಾರ ವಿರುದ್ಧ ಬೇಕಾದರೂ ಹೇಗೆ ಬೇಕಾದರೂ ಅಶ್ಲೀಲವಾಗಿ ಕಾಮೆಂಟ್ ಮಾಡಬಹುದೇ? ನಾನು ಯಾವುದೇ ಕಾರಣಕ್ಕೂ ಈ ಕೇಸ್ ವಾಪಸ್ ಪಡೆಯುವುದಿಲ್ಲ ಎಂದು ರಮ್ಯಾ ಖಡಕ್‌ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಟ್ರೋಲ್‌ ಹಾಗೂ ಸೈಬರ್‌ ದೌರ್ಜನ್ಯಗಳ ವಿರುದ್ಧ ಕಾನೂನು ಹೋರಾಟ ಮುಂದುವರಿಸುವುದಾಗಿ ರಮ್ಯಾ ಹೇಳಿದ್ದಾರೆ. ನ್ಯಾಯಾಲಯ ಎಷ್ಟು ಬಾರಿ ಸಾಕ್ಷ್ಯ ಹೇಳಲು ಕರೆದರೂ ಹಾಜರಾಗಿ ಸಾಕ್ಷ್ಯ ನೀಡಲು ಸಿದ್ಧವಿದ್ದೇನೆ. ಆದರೆ, ಯಾರಿಗೂ ಕ್ಷಮೆ ನೀಡುವ ಪ್ರಶ್ನೆಯೇ ಇಲ್ಲ.

ಈ ಘಟನೆ ಪ್ರತಿಯೊಬ್ಬರಿಗೂ ಸೂಕ್ತ ಪಾಠವಾಗಬೇಕು. ಮುಂದೆ ಮತ್ತೊಬ್ಬ ಹೆಣ್ಣುಮಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡುವ ಮುನ್ನ ಸಾವಿರ ಬಾರಿ ಯೋಚಿಸುವಂತಾಗಬೇಕು ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ರಮ್ಯಾ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಕೆಟ್ಟ ಹಾಗೂ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನಾತ್ಮಕ ಸಂದೇಶಗಳನ್ನು ರವಾನಿಸಲಾಗಿತ್ತು. ಈ ಸಂಬಂಧ ರಮ್ಯಾ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಸಿಸಿಬಿ ಪೊಲೀಸರು ತನಿಖೆ ನಡೆಸಿ, ನಿಂದನಾತ್ಮಕ ಸಂದೇಶಗಳನ್ನು ಕಳುಹಿಸಿದ್ದ ಹಲವು ಆರೋಪಿಗಳನ್ನು ಬಂಧಿಸಿದ್ದರು.

ಸದ್ಯ ಸಿಸಿಬಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 46ನೇ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ರಮ್ಯಾ ಅವರ ಹೇಳಿಕೆ ಹಾಗೂ ಆರೋಪಿಗಳ ಕ್ಷಮೆಯಾಚನೆ ಇದೀಗ ಗಮನ ಸೆಳೆದಿದೆ.

Leave a Reply

Your email address will not be published. Required fields are marked *