Greater Bengaluru News9 : ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದನ್ನು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಶಂಸಿಸಿದ್ದಾರೆ.
ಕಾರ್ಮಿಕರಿಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ವೇಳೆ ಸಿಎಂ ಅವರ ಎಪಿಎಂಸಿ ಭೇಟಿಯನ್ನು ನ್ಯಾಯಮೂರ್ತಿಗಳು ಪ್ರಸ್ತಾಪಿಸಿದರು. ಮುಖ್ಯಮಂತ್ರಿ ಮಾರುಕಟ್ಟೆಗೆ ಭೇಟಿ ನೀಡುವುದನ್ನು ಯಾರಾದರೂ ಗಿಮಿಕ್ ಎಂದು ಕರೆಯಬಹುದು. ಆದರೆ, ಇದು ‘ಗ್ರೇಟ್ ಜಾಬ್’ ಎಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆಗೆ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅಲ್ಲಿನ ವ್ಯಾಪಾರಿಗಳು ಹಾಗೂ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದರು. ಈ ವೇಳೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದ ಈರುಳ್ಳಿ, ಬೆಳ್ಳುಳ್ಳಿ ಮತ್ತು ಶುಂಠಿಯ ದರಗಳ ಬಗ್ಗೆ ಪರಿಶೀಲನೆ ನಡೆಸಿದ್ದರು.
ಅಲ್ಲದೆ, ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕರೊಂದಿಗೆ ಮುಖ್ಯಮಂತ್ರಿ ಮಾತನಾಡಿದ್ದರು. ಕಾರ್ಮಿಕರ ಸಮಸ್ಯೆಗಳು ಹಾಗೂ ಮಾರುಕಟ್ಟೆಯಲ್ಲಿನ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಅವರು ಸ್ಥಳದಲ್ಲೇ ಮಾಹಿತಿ ಪಡೆದಿದ್ದರು.
ಈ ವಿಚಾರಗಳನ್ನು ಕಾರ್ಮಿಕ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಉಲ್ಲೇಖಿಸಿದ್ದಾರೆ. ಎಪಿಎಂಸಿ ಮಾರುಕಟ್ಟೆಯಲ್ಲಿನ ಮಳಿಗೆಗಳ ಮಾಲೀಕತ್ವ ಮತ್ತು ಬಾಡಿಗೆ ವ್ಯವಸ್ಥೆಯ ಬಗ್ಗೆಯೂ ಅವರು ಪ್ರಸ್ತಾಪಿಸಿದ್ದಾರೆ.
ಎಪಿಎಂಸಿ ಮಳಿಗೆಗಳು ಕೆಲವರ ಹೆಸರಿನಲ್ಲಿದ್ದರೂ, ಅಲ್ಲಿ ಬೇರೆಯವರು ಬಾಡಿಗೆದಾರರಾಗಿ ವ್ಯಾಪಾರ ನಡೆಸುತ್ತಿರುವ ಪರಿಸ್ಥಿತಿ ಇದೆ ಎಂದು ನ್ಯಾಯಮೂರ್ತಿಗಳು ವಿಚಾರಣೆ ವೇಳೆ ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿಯವರ ಎಪಿಎಂಸಿ ಭೇಟಿಯನ್ನು ಉಲ್ಲೇಖಿಸಿ ಹೈಕೋರ್ಟ್ ನ್ಯಾಯಮೂರ್ತಿಗಳು ಮಾಡಿದ ಈ ಪ್ರಶಂಸೆ ಇದೀಗ ಗಮನ ಸೆಳೆದಿದೆ.

