Greater Bengaluru News9 : ಮಾಗಡಿ ರೋಡ್ನ ರಾಜಕಾಲುವೆಯಲ್ಲಿ ಅಪರಿಚಿತ ಮಹಿಳೆಯ ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾದ ಪ್ರಕರಣ ಪೊಲೀಸರಿಗೆ ಸವಾಲಾಗಿದೆ.
ಒಂದು ವಾರ ಕಳೆದರೂ ಮಹಿಳೆಯ ಗುರುತು ಪತ್ತೆಯಾಗಿಲ್ಲ. ಇತ್ತ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಬಗ್ಗೆಯೂ ಯಾವುದೇ ಸ್ಪಷ್ಟ ಸುಳಿವು ಸಿಕ್ಕಿಲ್ಲ. ಈ ನಡುವೆ, ಘಟನಾ ಸ್ಥಳದ ಸುತ್ತಮುತ್ತ ಎರಡು ಅನುಮಾನಾಸ್ಪದ ಕಾರುಗಳು ಸಂಚರಿಸಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ರಾಜಕಾಲುವೆಯಲ್ಲಿ ಪತ್ತೆಯಾದ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿತ್ತು. ಅಲ್ಲದೆ, ಬಾಯಿಗೆ ಬಟ್ಟೆ ತುರುಕಿದ ರೀತಿಯಲ್ಲಿ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಇದು ಕೊಲೆ ಪ್ರಕರಣವಿರಬಹುದು ಎಂದು ಶಂಕಿಸಿರುವ ಪೊಲೀಸರು, ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಮೃತದೇಹವನ್ನು ರಾಜಕಾಲುವೆಗೆ ಎಸೆದು ಪರಾರಿಯಾಗಿರಬಹುದು ಎಂಬ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.
ಮೃತದೇಹ ಪತ್ತೆಯಾಗುವುದಕ್ಕೂ ಸುಮಾರು 10ರಿಂದ 12 ದಿನಗಳ ಹಿಂದೆಯೇ ಅದನ್ನು ರಾಜಕಾಲುವೆಗೆ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಎರಡು ಅನುಮಾನಾಸ್ಪದ ಕಾರುಗಳು ಸಂಚರಿಸಿರುವುದು ಕಂಡುಬಂದಿದೆ ಎನ್ನಲಾಗಿದೆ.
ಸದ್ಯ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಹಿಳೆಯ ಗುರುತು ಪತ್ತೆಹಚ್ಚಲು ಹಾಗೂ ಪ್ರಕರಣದ ಹಿಂದಿರುವ ಆರೋಪಿಗಳನ್ನು ಪತ್ತೆ ಮಾಡಲು ತನಿಖೆ ಚುರುಕುಗೊಳಿಸಿದ್ದಾರೆ. ಮಹಿಳೆ ಯಾರು? ಆಕೆಯ ಸಾವಿಗೆ ಕಾರಣವೇನು? ಅನುಮಾನಾಸ್ಪದ ಕಾರುಗಳಿಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ? ಎಂಬ ಪ್ರಶ್ನೆಗಳಿಗೆ ತನಿಖೆಯಿಂದ ಉತ್ತರ ಸಿಗಬೇಕಿದೆ.

