Greater Bengaluru News9 : ನಗರಗಳಲ್ಲಿ ಹೊಸದಾಗಿ ಡಾಂಬರೀಕರಣಗೊಂಡ ರಸ್ತೆಗಳು ಕೆಲವೇ ದಿನಗಳಲ್ಲಿ ಮತ್ತೆ ಅಗೆತಕ್ಕೆ ಒಳಗಾಗಿ ಹಾಳಾಗುತ್ತಿರುವ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪಾಲಿಕೆಗಳು ಮುಂದಾಗಿವೆ. ಇನ್ಮುಂದೆ ಬೆಸ್ಕಾಂ, ಜಲಮಂಡಳಿ ಸೇರಿದಂತೆ ಯಾವುದೇ ಇಲಾಖೆಗಳು ರಸ್ತೆ ಅಗೆಯಬೇಕಾದರೆ ನಗರ ಪಾಲಿಕೆಯ ಪೂರ್ವಾನುಮತಿ ಕಡ್ಡಾಯ. ಅನುಮತಿ ಪಡೆಯದೆ ಹೊಸ ರಸ್ತೆಗಳನ್ನು ಅಗೆದರೆ ಸಂಬಂಧಪಟ್ಟ ಇಲಾಖೆಗಳು ಹಾಗೂ ಸಂಸ್ಥೆಗಳ ವಿರುದ್ಧ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಸಂಬಂಧ 5 ನಗರ ಪಾಲಿಕೆಗಳ ಅಧಿಕಾರಿಗಳೊಂದಿಗೆ ಇಂದು ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ಹೊಸದಾಗಿ ಡಾಂಬರೀಕರಣಗೊಂಡ ರಸ್ತೆಗಳಲ್ಲಿ ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇತರೆ ಯಾವುದೇ ಇಲಾಖೆಗಳು ಅಥವಾ ಸಂಸ್ಥೆಗಳು ನಗರ ಪಾಲಿಕೆಯ ಅನುಮತಿ ಪಡೆಯದೆ ರಸ್ತೆ ಅಗೆದರೆ, ಅಂತಹವರ ವಿರುದ್ಧ ದಂಡ ವಿಧಿಸಬೇಕು. ಅನುಮತಿಯಿಲ್ಲದೆ ರಸ್ತೆ ಅಗೆಯಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಗುರುತಿಸಿ, ತ್ವರಿತವಾಗಿ ಮುಚ್ಚುವಂತೆ ನಿರ್ದೇಶನ ನೀಡಿದರು.
ನಮ್ಮ ವಾಟ್ಸ್ಆ್ಯಪ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://chat.whatsapp.com/J67EBfE5mZ8CAMiExmxO5q?s=sw&p=a&iam=2
ಆಯಾ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ಹಾಗೂ ಕೈಗೆತ್ತಿಕೊಳ್ಳಲಿರುವ ವೈಟ್ ಟಾಪಿಂಗ್ ಕಾಮಗಾರಿಗಳ ರಸ್ತೆಗಳಲ್ಲಿ ಯಾವುದೇ ಗುಂಡಿಗಳು ಇರದಂತೆ ನೋಡಿಕೊಳ್ಳಬೇಕು. ವಾಹನ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಬಿ-ಸ್ಮೈಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದೋಷಮುಕ್ತ ಅವಧಿ(ಡಿಎಲ್ಪಿ)ಯಲ್ಲಿರುವ ರಸ್ತೆಗಳಲ್ಲಿ ಗುತ್ತಿಗೆದಾರರಿಂದಲೇ ರಸ್ತೆ ಗುಂಡಿಗಳನ್ನು ಮುಚ್ಚಿಸಬೇಕು. ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿರುವ ಹಾಗೂ ಡಿಎಲ್ಪಿ ಅವಧಿಯಲ್ಲಿರುವ ರಸ್ತೆಗಳನ್ನು ಹೊರತುಪಡಿಸಿ, ಉಳಿದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಆಯಾ ನಗರ ಪಾಲಿಕೆಗಳ ವತಿಯಿಂದ ತಕ್ಷಣವೇ ಮುಚ್ಚುವಂತೆ ಸೂಚನೆ ನೀಡಿದರು.
ರಸ್ತೆ ಗುಂಡಿಗಳನ್ನು ಪರಿಣಾಮಕಾರಿಯಾಗಿ ಮುಚ್ಚುವ ಸಲುವಾಗಿ ಆಯಾ ನಗರ ಪಾಲಿಕೆಗಳ ಹಿರಿಯ ಅಧಿಕಾರಿಗಳು ಖುದ್ದಾಗಿ ರಸ್ತೆಗಳನ್ನು ಪರಿಶೀಲಿಸಿ, ಕೂಡಲೇ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚಿದ ನಂತರ ಅದರ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಡೇಟ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಹೊರವರ್ತುಲ ರಸ್ತೆಯ ಇಮ್ಮಡಿಹಳ್ಳಿ ರಸ್ತೆಯಲ್ಲಿ ಜಲಮಂಡಳಿಯ ಪೈಪ್ಲೈನ್ನಿಂದ ನೀರು ಸೋರಿಕೆಯಾಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದರು. ಅತ್ತಿಗುಪ್ಪೆ ರಸ್ತೆ ಬದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತ್ಯಾಜ್ಯದ ಸಮಸ್ಯೆ ಇರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿದರು.

