Greater Bengaluru News9 : ಮೇಕೆದಾಟು ಸಮತೋಲನಾ ಜಲಾಶಯ ಯೋಜನೆಯ ವಿವರವಾದ ಯೋಜನಾ ವರದಿಗೆ (ಡಿಪಿಆರ್) ಶೀಘ್ರ ಅನುಮೋದನೆ ನೀಡುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದೇ ವೇಳೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಪದೇಪದೇ ನಿರ್ದೇಶನ ನೀಡುತ್ತಿರುವುದಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ತೀವ್ರವಾಗಿ ಕುಸಿದಿದ್ದರೂ, ತಮಿಳುನಾಡಿನ ಬೇಡಿಕೆಗೆ ಮಣಿದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀರು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರಂತರವಾಗಿ ಸೂಚನೆ ನೀಡುತ್ತಿದೆ.
ಬೆಂಗಳೂರಿನಲ್ಲಿ ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಗತ್ಯ ಪೂರೈಸಲು ಜಲಾಶಯಗಳಲ್ಲಿ ಲಭ್ಯವಿರುವ ಅಲ್ಪ ಪ್ರಮಾಣದ ನೀರನ್ನು ಕಾಯ್ದಿರಿಸಬೇಕಿದೆ ಎಂಬ ಕರ್ನಾಟಕದ ಮನವಿಯನ್ನು ಪ್ರಾಧಿಕಾರ ನಿರ್ಲಕ್ಷಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಾಧಿಕಾರದ ನಿರ್ದೇಶನಗಳನ್ನು ಸಂಪೂರ್ಣವಾಗಿ ಪಾಲಿಸಿದರೆ ರಾಜ್ಯದ ಎಲ್ಲ ಜಲಾಶಯಗಳು ಶೀಘ್ರದಲ್ಲೇ ಬರಿದಾಗಲಿವೆ. ಇಂತಹ ಪರಿಸ್ಥಿತಿಯಲ್ಲಿ ಕುಡಿಯುವ ನೀರಿನ ಅಭಾವ ಆತಂಕಕಾರಿ ಮಟ್ಟ ತಲುಪುವುದರಲ್ಲಿ ಅನುಮಾನವಿಲ್ಲ ಎಂದು ಎಚ್ಚರಿಸಿದ್ದಾರೆ.
ತಮಿಳುನಾಡಿಗೆ ನೀರಿನ ಅಗತ್ಯ ಮುಖ್ಯವಾಗಿ ನೀರಾವರಿಗಾಗಿ ಇದ್ದರೆ, ಕರ್ನಾಟಕವು ತನ್ನ ಜಲಾಶಯಗಳಲ್ಲಿ ಉಳಿದಿರುವ ಅಲ್ಪ ಪ್ರಮಾಣದ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಕಾಯ್ದಿರಿಸಲು ಬಯಸುತ್ತಿದೆ. ರಾಷ್ಟ್ರೀಯ ಜಲ ನೀತಿಯ ಪ್ರಕಾರ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಾಗಿರುವುದರಿಂದ, ಕರ್ನಾಟಕದ ಅಹವಾಲುಗಳನ್ನು ಆಲಿಸಿ ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಬೇಡಿಕೆಯನ್ನು ತಿರಸ್ಕರಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದ ಗೆಜೆಟ್ನಲ್ಲಿ ಅಧಿಸೂಚಿಸಲಾದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕಾರ್ಯವ್ಯಾಪ್ತಿ ಹಾಗೂ ಕರ್ತವ್ಯಗಳನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದೂ ಪ್ರತಿಪಾದಿಸಿದ್ದಾರೆ.
2018ರ ಫೆಬ್ರವರಿ 16ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಅನ್ವಯ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ಮೇಲ್ವಿಚಾರಣೆ ಮಾಡುವುದಕ್ಕೆ ಮಾತ್ರ ಪ್ರಾಧಿಕಾರದ ಕಾರ್ಯಗಳನ್ನು ಸೀಮಿತಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.
1990ರಲ್ಲಿ ಕಾವೇರಿ ನ್ಯಾಯಮಂಡಳಿ ರಚನೆಯಾದ ತಕ್ಷಣವೇ ಮಧ್ಯಂತರ ಆದೇಶ ಹೊರಡಿಸಿ, ಕರ್ನಾಟಕವು ಪ್ರತಿವರ್ಷ ತಮಿಳುನಾಡಿಗೆ 205 ಟಿಎಂಸಿ ಅಡಿ ನೀರು ಬಿಡುಗಡೆ ಮಾಡಬೇಕೆಂದು ಸೂಚಿಸಿತ್ತು. ಅಲ್ಲದೆ, 12 ತಿಂಗಳಿಗೂ ನೀರು ಬಿಡುಗಡೆ ಮಾಡುವ ಮಾಸಿಕ ವೇಳಾಪಟ್ಟಿಯನ್ನೂ ನಿಗದಿಪಡಿಸಿತ್ತು. ದೇಶದ ಬೇರೆ ಯಾವುದೇ ನ್ಯಾಯಮಂಡಳಿ ಇಂತಹ ಮಧ್ಯಂತರ ಆದೇಶ ನೀಡಿ ಮಾಸಿಕ ನೀರು ಹಂಚಿಕೆ ವೇಳಾಪಟ್ಟಿ ರೂಪಿಸಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2007ರ ಫೆಬ್ರವರಿಯಲ್ಲಿ ಅಂತಿಮ ತೀರ್ಪು ಪ್ರಕಟಿಸುವ ಸಂದರ್ಭದಲ್ಲಿಯೂ ಕರ್ನಾಟಕಕ್ಕೆ ಹಂಚಿಕೆಯಾದ ನೀರಿನ ಪ್ರಮಾಣ ರಾಜ್ಯಕ್ಕೆ ಸಿಗಬೇಕಿದ್ದ ಪಾಲಿಗಿಂತ ಕಡಿಮೆಯಾಗಿತ್ತು. ಹಲವು ವಿಚಾರಗಳಲ್ಲಿ ಕರ್ನಾಟಕದ ವಿರುದ್ಧ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆಯ ತೀವ್ರತೆಯನ್ನು ಪರಿಗಣಿಸಿ ಮೇಕೆದಾಟು ಯೋಜನೆಯ ಡಿಪಿಆರ್ಗೆ ಕೇಂದ್ರ ಸರ್ಕಾರ ಆದ್ಯತೆಯ ಮೇರೆಗೆ ಅನುಮೋದನೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದೇ ವೇಳೆ, ಗೋದಾವರಿ-ಕೃಷ್ಣಾ-ಕಾವೇರಿ ನದಿ ಜೋಡಣೆ ಯೋಜನೆಯಡಿ ಕರ್ನಾಟಕಕ್ಕೆ ಹಂಚಿಕೆಯಾಗಿರುವ ಗೋದಾವರಿ ನೀರಿನ ಪ್ರಮಾಣವನ್ನು ಹೆಚ್ಚಿಸುವಂತೆ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಗೂ ಮನವಿ ಮಾಡಿದ್ದಾರೆ. ಇದೇ ವೇಳೆ, ಮೇಕೆದಾಟು ಯೋಜನೆಯನ್ನು ಕರ್ನಾಟಕ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಯೋಜನೆಯು ಕಾನೂನುಬದ್ಧವಾಗಿದ್ದು, ಯಾವುದೇ ಅತಿಕ್ರಮಣ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಕಾನೂನಿನ ಚೌಕಟ್ಟಿನಲ್ಲಿ ಯಾವುದು ಸರಿಯೋ ಅದನ್ನೇ ಮಾಡಬೇಕು. ನಾವು ತಮಿಳುನಾಡಿನ ಪಾಲಿನ ನೀರನ್ನು ತೆಗೆದುಕೊಳ್ಳುತ್ತಿಲ್ಲ. ಸುಪ್ರೀಂಕೋರ್ಟ್ ಅಥವಾ ನೀರು ಹಂಚಿಕೆ ನ್ಯಾಯಮಂಡಳಿ ನೀಡಿರುವ ಯಾವುದೇ ಆದೇಶವನ್ನು ಉಲ್ಲಂಘಿಸುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೂ ಅನುಕೂಲವಾಗಲಿದೆ. ಕರ್ನಾಟಕಕ್ಕೂ ಇದರ ಅಗತ್ಯವಿದೆ ಎಂದು ತಿಳಿಸಿದ್ದಾರೆ.

