Greater Bengaluru News9: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾಯ್ದೆಯನ್ನು ಪ್ರಸ್ತುತ ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ಅಥವಾ ತಿದ್ದುಪಡಿ ತರಲು ಮುಂದಾಗಿರುವ ನಡೆಯನ್ನು ಶ್ರೀರಾಮ ಸೇನೆ ತೀವ್ರವಾಗಿ ಖಂಡಿಸಿದೆ. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಶ್ರೀ ಚಲವಾದಿ ನಾರಾಯಣಸ್ವಾಮಿ ಅವರನ್ನು ಭೇಟಿಯಾದ ಶ್ರೀರಾಮ ಸೇನೆ ನಿಯೋಗವು ಅಧಿಕೃತ ಮನವಿ ಪತ್ರವನ್ನು ಸಲ್ಲಿಸಿತು.
ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ, ಸಂಘಟನೆಯ ರಾಜ್ಯ ಪದಾಧಿಕಾರಿಗಳು ಹಾಗೂ ಬೆಂಗಳೂರು ನಗರ ಘಟಕದ ಪ್ರಮುಖ ಪದಾಧಿಕಾರಿಗಳು ಈ ನಿಯೋಗದಲ್ಲಿದ್ದರು. ಗೋಹತ್ಯೆ ನಿಷೇಧ ಕಾಯ್ದೆಯು ರೈತರು ಹಾಗೂ ಗೋಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಯಾವುದೇ ಕಾರಣಕ್ಕೂ ಈ ಕಾಯ್ದೆಗೆ ತಿದ್ದುಪಡಿ ತರದಂತೆ ಮತ್ತು ಅದನ್ನು ಹಿಂಪಡೆಯದಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮುತಾಲಿಕ್ ಅವರು ಮನವಿ ಮಾಡಿದರು.
ಮುಂಬರುವ ಅಧಿವೇಶನದಲ್ಲಿ ಮತ್ತು ಸದನದ ಹೊರಗೆ ಈ ವಿಚಾರವಾಗಿ ಪ್ರಬಲವಾಗಿ ಧ್ವನಿ ಎತ್ತುವ ಮೂಲಕ ಕಾಯ್ದೆಯನ್ನು ಯಥಾವತ್ತಾಗಿ ಉಳಿಸಿಕೊಳ್ಳಲು ಹೋರಾಟ ನಡೆಸುವಂತೆ ವಿರೋಧ ಪಕ್ಷದ ನಾಯಕರಿಗೆ ಮನವಿಯಲ್ಲಿ ಕೋರಲಾಗಿದೆ. ಮನವಿ ಸ್ವೀಕರಿಸಿದ ಚಲವಾದಿ ನಾರಾಯಣಸ್ವಾಮಿ ಅವರು, ಗೋಹತ್ಯೆ ನಿಷೇಧ ಕಾಯ್ದೆಯ ರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸರ್ಕಾರದ ಈ ನಿರ್ಧಾರದ ವಿರುದ್ಧ ಸದನದಲ್ಲಿ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಭರವಸೆ ನೀಡಿದರು.

