Greater Bengaluru News9 : ಹಾಸನ ಜಿಲ್ಲೆಯಿಂದ ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ, ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೊಟ್ಟ ಮಾತಿನಂತೆ ಸೋಮವಾರ (ನವೆಂಬರ್ 23) ವಿಧಾನಸೌಧಕ್ಕೆ ಆಗಮಿಸಿದ ಅವರು, ವಿಧಾನಸಭಾಧ್ಯಕ್ಷರ (ಸ್ಪೀಕರ್) ಕಚೇರಿಗೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ.
ಆನೆಗಳ ಸ್ಥಳಾಂತರ ವಿಚಾರವಾಗಿ ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಬಂಡೆದ್ದಿರುವ ನಯನಾ ಮೋಟಮ್ಮ, ಸೋಮವಾರ ರಾಜೀನಾಮೆ ಪತ್ರದೊಂದಿಗೆ ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ್ದರು. ಆ ಸಮಯದಲ್ಲಿ ಸ್ಪೀಕರ್ ಅವರು ಕಚೇರಿಯಲ್ಲಿ ಇಲ್ಲದ ಕಾರಣ, ಸ್ಪೀಕರ್ ಆಪ್ತ ಕಾರ್ಯದರ್ಶಿ ಅಶೋಕ್ ಮಿರ್ಜಿ ಅವರ ಮೂಲಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಈ ವೇಳೆ ನಿಯಮಾವಳಿಗಳ ಪ್ರಕಾರ ತಮಗೆ ರಾಜೀನಾಮೆ ಪತ್ರವನ್ನು ಅಧಿಕೃತವಾಗಿ ಅಂಗೀಕರಿಸಲು ಅವಕಾಶವಿಲ್ಲ ಎಂದು ತಿಳಿಸಿದ ಅಶೋಕ್ ಮಿರ್ಜಿ ಅವರು, ಶಾಸಕಿ ನಯನಾ ಮೋಟಮ್ಮ ಅವರು ರಾಜೀನಾಮೆ ಸಲ್ಲಿಸಿರುವ ವಿಚಾರವನ್ನು ತಕ್ಷಣವೇ ದೂರವಾಣಿ ಕರೆ ಮೂಲಕ ಸ್ಪೀಕರ್ ಅವರ ಗಮನಕ್ಕೆ ತಂದಿದ್ದಾರೆ.
ಹಾಸನದ ಬೇಲೂರು ಭಾಗದಿಂದ ಮೂಡಿಗೆರೆ ಮಾರ್ಗವಾಗಿ ಭದ್ರಾ (ಮುತ್ತೋಡಿ) ಅಭಯಾರಣ್ಯಕ್ಕೆ ಕಾಡಾನೆಗಳನ್ನು ಅಟ್ಟುತ್ತಿರುವ ಅರಣ್ಯ ಇಲಾಖೆಯ ಕ್ರಮಕ್ಕೆ ಚಿಕ್ಕಮಗಳೂರು ಜಿಲ್ಲೆಯ ಕಾಡಂಚಿನ ಜನರು ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳೀಯರ ಈ ಹೋರಾಟಕ್ಕೆ ಜಿಲ್ಲೆಯ ಮೂವರು ಕಾಂಗ್ರೆಸ್ ಶಾಸಕರಾದ ನಯನಾ ಮೋಟಮ್ಮ, ಎಚ್.ಡಿ. ತಮ್ಮಯ್ಯ ಹಾಗೂ ಟಿ.ಡಿ. ರಾಜೇಗೌಡ ಅವರು ಬೆಂಬಲವಾಗಿ ನಿಂತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.
“ಜನರ ಜೀವ ಮತ್ತು ಕೃಷಿ ಬೆಳೆಗಳ ರಕ್ಷಣೆ ನಮಗೆ ಮುಖ್ಯವೇ ಹೊರತು ಅಧಿಕಾರವಲ್ಲ. ಈಗಾಗಲೇ ಮೂಡಿಗೆರೆ ಭಾಗಕ್ಕೆ ಓಡಿಸಲಾಗಿರುವ ಆನೆಗಳನ್ನು ತಕ್ಷಣವೇ ವಾಪಸ್ ಕಳುಹಿಸಬೇಕು, ಇಲ್ಲದಿದ್ದರೆ ಸೋಮವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತ” ಎಂದು ನಯನಾ ಮೋಟಮ್ಮ ಅವರು ಭಾನುವಾರ (ನವೆಂಬರ್ 22) ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಪತ್ರವನ್ನು ಪ್ರದರ್ಶಿಸಿ ಬಹಿರಂಗ ಎಚ್ಚರಿಕೆ ನೀಡಿದ್ದರು.
ಅದರಂತೆ, ಆನೆಗಳನ್ನು ವಾಪಸ್ ಕಳುಹಿಸದ ಹಿನ್ನೆಲೆಯಲ್ಲಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ನಯನಾ ಮೋಟಮ್ಮ ಅವರು ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದಾರೆ. ಆಡಳಿತಾರೂಢ ಪಕ್ಷದ ಶಾಸಕಿಯ ಈ ದಿಟ್ಟ ನಡೆಯಿಂದಾಗಿ ರಾಜ್ಯ ಸರ್ಕಾರ ಹಾಗೂ ಸ್ಪೀಕರ್ ಮುಂದೆ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

