Greater Bengaluru News9 : ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ 13 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರ ಅಧಿಕೃತ ಲಿಖಿತ ಟಿಪ್ಪಣಿ ಹೊರಡಿಸಿದೆ.
ಮೌಖಿಕ ಭರವಸೆಗೆ ಒಪ್ಪದ ಆಶಾ ಕಾರ್ಯಕರ್ತೆಯರು, ಲಿಖಿತ ಆದೇಶ ನೀಡುವಂತೆ ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅಧಿಕೃತ ಟಿಪ್ಪಣಿ ಹೊರಡಿಸಿದ್ದಾರೆ.
ನವೆಂಬರ್ 28ರಂದು ಮುಖ್ಯಮಂತ್ರಿ ಅವರು ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಬೇಡಿಕೆಗಳನ್ನು ಆಲಿಸಿದ್ದರು. ಈ ವೇಳೆ ಮಾಸಿಕ ಗೌರವಧನವನ್ನು 2,000 ರೂ. ಹೆಚ್ಚಿಸಲು ನಿರ್ಧರಿಸಲಾಗಿತ್ತು.
ಇದೀಗ ಕಾರ್ಯಕರ್ತೆಯರ ಮನವಿಯನ್ನು ಪರಿಗಣಿಸಿರುವ ಸರ್ಕಾರ, 2027ರ ಜನವರಿ 1ರಿಂದಲೇ ಹೆಚ್ಚಳ ಜಾರಿಗೆ ತರಲು ಒಪ್ಪಿಗೆ ಸೂಚಿಸಿದೆ. ನಿಗದಿತ ದಿನಾಂಕದಿಂದ ಹೆಚ್ಚುವರಿ ಗೌರವಧನ ನೀಡಲು ಅಗತ್ಯ ಪ್ರಕ್ರಿಯೆಗಳನ್ನು ಆದ್ಯತೆಯ ಮೇರೆಗೆ ಆರಂಭಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಗಳ ಕಚೇರಿ ನಿರ್ದೇಶನ ನೀಡಿದೆ.

