Greater Bengaluru News9 : ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14ರಂದು ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.
ನಿಷೇಧದ ನಿಯಮಗಳನ್ನು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ತಿಳಿಸಿದೆ.
ಇನ್ನು ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ವ್ಯಾಪಕ ಸಿದ್ಧತೆ ಮಾಡಲಾಗಿದೆ. ಇಲ್ಲಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶವಿದ್ದು, ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ, 24 ಗಂಟೆಗಳ ಕ್ರೇನ್ ಸೇವೆ, ಆಂಬುಲೆನ್ಸ್, ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಸಂಚಾರ ನಿರ್ವಹಣೆಗೆ ವ್ಯವಸ್ಥೆ ಮಾಡಲಾಗಿದೆ.
ಸೆಪ್ಟೆಂಬರ್ 14, 16, 18, 20, 22, 24, 26, 27 ಹಾಗೂ 28ರಂದು ಗಣೇಶ ವಿಸರ್ಜನೆಗೆ ಅವಕಾಶ ನೀಡಲಾಗಿದೆ. ಕೆರೆ ಸ್ವಚ್ಛತಾ ಕಾರ್ಯಕ್ಕಾಗಿ ಸೆಪ್ಟೆಂಬರ್ 15, 17, 19, 21, 23 ಹಾಗೂ 25ರಂದು ವಿಸರ್ಜನೆಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಲಾಗಿದೆ.

