Greater Bengaluru News9 : ಈ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಭಾನುವಾರದಂದು ಬಂದಿದ್ದರೂ, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ರಾಜ್ಯೋತ್ಸವ ಆಚರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಖಾಸಗಿ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ.
ಪ್ರತಿ ವರ್ಷ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಈ ಬಾರಿ ರಾಜ್ಯೋತ್ಸವ ಭಾನುವಾರದಂದು ಬಂದಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಆಚರಣೆ ನಡೆಸುವ ಕುರಿತು ಶಿಕ್ಷಣ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.
ರಾಷ್ಟ್ರೀಯ ಹಬ್ಬಗಳು, ನಾಡಹಬ್ಬವಾದ ಕನ್ನಡ ರಾಜ್ಯೋತ್ಸವ ಹಾಗೂ ಇತರ ಪ್ರಮುಖ ಜಯಂತಿಗಳನ್ನು ಆಯಾ ದಿನಗಳಂದೇ ಗೌರವಪೂರ್ವಕವಾಗಿ ಆಚರಿಸಬೇಕು ಎಂಬ ನಿಯಮ ಈಗಾಗಲೇ ಜಾರಿಯಲ್ಲಿದೆ. ಅದರಂತೆ ಈ ವರ್ಷವೂ ನವೆಂಬರ್ 1ರಂದೇ ಕನ್ನಡ ರಾಜ್ಯೋತ್ಸವ ಆಚರಿಸುವುದು ಕಡ್ಡಾಯ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಈ ಸೂಚನೆಯನ್ನು ಪಾಲಿಸಬೇಕು. ಭಾನುವಾರ ಎಂಬ ಕಾರಣಕ್ಕೆ ರಾಜ್ಯೋತ್ಸವ ಆಚರಣೆಯನ್ನು ಮುಂದೂಡುವಂತಿಲ್ಲ ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಹೀಗಾಗಿ ನವೆಂಬರ್ 1ರಂದು ಭಾನುವಾರವಾಗಿದ್ದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಿದೆ.

