Greater Bengaluru News9 : ರಾಜ್ಯದಲ್ಲಿ ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಶಬ್ದ ಮತ್ತು ವಾಯು ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯು ಮಹತ್ವದ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಹಬ್ಬದ ದಿನಗಳಲ್ಲಿ ಪರಿಸರಕ್ಕೆ ಹಾನಿಯಾಗದಂತೆ ಕೇವಲ ಅಧಿಕೃತ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ನ್ಯಾಯಾಲಯ ನಿಗದಿಪಡಿಸಿರುವ ರಾತ್ರಿ 8:00 ರಿಂದ 10:00 ಗಂಟೆಯ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಲು ಅವಕಾಶವಿರುತ್ತದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ದೀಪಾವಳಿ ಸಂದರ್ಭದಲ್ಲಿ ಸಾರ್ವಜನಿಕರು ಹಾಗೂ ಮಾರಾಟಗಾರರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಅನುಮತಿಸಲಾಗಿದೆ. ಪ್ರತಿಯೊಂದು ಹಸಿರು ಪಟಾಕಿ ಪ್ಯಾಕೆಟ್‌ಗಳ ಮೇಲೆ ಹಸಿರು ಪಟಾಕಿಯ ಅಧಿಕೃತ ಚಿಹ್ನೆ ಹಾಗೂ ಕ್ಯೂ.ಆರ್. ಕೋಡ್ (QR Code) ಇರುವುದನ್ನು ಪರಿಸರ ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು. ಈ ಯಾವುದೇ ಲಾಂಛನಗಳಿಲ್ಲದ ಪಟಾಕಿಗಳನ್ನು ನಿಷೇಧಿತವೆಂದು ಪರಿಗಣಿಸಿ ಅಧಿಕಾರಿಗಳು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ.
ನಿಷೇಧಿತ ಪಟಾಕಿಗಳ ಮಾರಾಟ ಹಾಗೂ ದಾಸ್ತಾನನ್ನು ತಡೆಯಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಕಾರ್ಯಪಡೆ ರಚನೆಯಾಗಲಿದೆ. ಈ ತಂಡದಲ್ಲಿ ಅಗ್ನಿಶಾಮಕ ದಳ, ಪೊಲೀಸ್, ಸ್ಥಳೀಯ ಸಂಸ್ಥೆಗಳ ಆರೋಗ್ಯಾಧಿಕಾರಿಗಳು, ತಹಶೀಲ್ದಾರರು, ಪರಿಸರ ಅಧಿಕಾರಿಗಳು ಹಾಗೂ ಎನ್‌ಜಿಒ ಪ್ರತಿನಿಧಿಗಳು ಇರಲಿದ್ದಾರೆ. ಇವರು ಪಟಾಕಿ ಗೋದಾಮುಗಳನ್ನು ತಪಾಸಣೆ ನಡೆಸಲಿದ್ದು, ನಿಯಮಬಾಹಿರವಾಗಿ ನಿಷೇಧಿತ ಪಟಾಕಿಗಳನ್ನು ಸಂಗ್ರಹಿಸಿರುವುದು ಕಂಡುಬಂದರೆ ಸಂಪೂರ್ಣ ಗೋದಾಮನ್ನು ವಶಪಡಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ.
ನ್ಯಾಯಾಲಯದ ನಿರ್ದೇಶನದಂತೆ ಸಾರ್ವಜನಿಕರು ರಾತ್ರಿ 8:00 ರಿಂದ 10:00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶವಿದ್ದು, ಉಳಿದ ಅವಧಿಯಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜೊತೆಗೆ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸೂಕ್ಷ್ಮ ವಲಯಗಳ ಸುತ್ತಮುತ್ತ ಯಾವುದೇ ರೀತಿಯ ಪಟಾಕಿ ಸಿಡಿಸುವುದಕ್ಕೆ ನಿರ್ಬಂಧ ಹೇರಲಾಗಿದೆ. ಪಟಾಕಿ ಹಚ್ಚುವ ಸಂದರ್ಭದಲ್ಲಿ ಮಕ್ಕಳು, ವೃದ್ಧರು ಹಾಗೂ ಪ್ರಾಣಿ-ಪಕ್ಷಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.
ಹೊರರಾಜ್ಯಗಳಿಂದ ಅಕ್ರಮವಾಗಿ ನಿಷೇಧಿತ ಪಟಾಕಿಗಳು ರಾಜ್ಯಕ್ಕೆ ಬರುವುದನ್ನು ತಡೆಯಲು ವಾಣಿಜ್ಯ ತೆರಿಗೆ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ಗಡಿ ತನಿಖಾ ಠಾಣೆಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಿವೆ. ಅನಧಿಕೃತವಾಗಿ ಪಟಾಕಿಗಳನ್ನು ಸಾಗಿಸುವ ವಾಹನಗಳನ್ನು ಮತ್ತು ಸರಕನ್ನು ಸ್ಥಳದಲ್ಲೇ ಮುಟ್ಟುಗೋಲು ಹಾಕಿಕೊಳ್ಳಲು ಸ್ಪಷ್ಟ ಆದೇಶ ನೀಡಲಾಗಿದೆ.
ಪರಿಸರಸ್ನೇಹಿ ಹಬ್ಬ ಆಚರಣೆಯ ಕುರಿತು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ ಮತ್ತು ಮಾಲ್‌ಗಳಲ್ಲಿ ಭಿತ್ತಿಪತ್ರ, ಆಡಿಯೋ ಮತ್ತು ವಿಡಿಯೋಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಿಳಿಸಲಾಗಿದೆ. ಇದರೊಂದಿಗೆ ಸ್ಥಳೀಯ ಟಿವಿ ಮತ್ತು ರೇಡಿಯೋಗಳಲ್ಲೂ ಜಾಗೃತಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುವುದು. ಹಬ್ಬದ ದಿನಗಳಲ್ಲಿ ಉತ್ಪತ್ತಿಯಾಗುವ ಪಟಾಕಿ ತ್ಯಾಜ್ಯವನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ವೈಜ್ಞಾನಿಕ ವಿಧಾನದ ಮೂಲಕ ಸುರಕ್ಷಿತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕೆಂದು ಸಚಿವರು ನಿರ್ದೇಶಿಸಿದ್ದಾರೆ.

