ChatGPT Image Oct 3, 2026, 08_41_04 PM-modified
GREATER BENGALURU NEWS 9
Vidhan Soudha

Greater Bengaluru News9 : ವಿಧಾನಸೌಧ ಕಟ್ಟಡ ಬಾಂಬ್ ಸ್ಫೋಟದಿಂದ ಧ್ವಂಸವಾಗುತ್ತಿರುವಂತೆ ಕೃತಕ ಬುದ್ಧಿಮತ್ತೆ (AI) ಬಳಸಿ ನಕಲಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ ಮೇಲೆ 25 ವರ್ಷದ ಕಾರ್ಮಿಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಿಹಾರ ಮೂಲದ ಅಲಿ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಪೈಪ್ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಅಕ್ಟೋಬರ್ 20ರಂದು ಆರೋಪಿ ಇನ್‌ಸ್ಟಾಗ್ರಾಮ್ ಖಾತೆಯೊಂದರ ಮೂಲಕ ಈ ವಿಡಿಯೋವನ್ನು ಹಂಚಿಕೊಂಡಿದ್ದ ಎನ್ನಲಾಗಿದೆ. ವಿಡಿಯೋದಲ್ಲಿ ವಿಧಾನಸೌಧದ ನೈಜ ದೃಶ್ಯಗಳನ್ನು ತೋರಿಸಿ, ನಂತರ AI ತಂತ್ರಜ್ಞಾನ ಬಳಸಿ ಕಟ್ಟಡ ಸ್ಫೋಟಗೊಂಡು ಧ್ವಂಸವಾಗುತ್ತಿರುವಂತೆ ಚಿತ್ರಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೇಲಿನ ನಿಗಾ ಕಾರ್ಯಾಚರಣೆ ವೇಳೆ ಈ ವಿಡಿಯೋ ಪೊಲೀಸರ ಗಮನಕ್ಕೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ವಿಧಾನಸೌಧ ಠಾಣೆ ಪೊಲೀಸರು, ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೈಬರ್ ತಜ್ಞರ ನೆರವಿನಿಂದ ಇನ್‌ಸ್ಟಾಗ್ರಾಮ್ ಖಾತೆಯ ಡಿಜಿಟಲ್ ಮಾಹಿತಿಗಳನ್ನು ಪರಿಶೀಲಿಸಿದ ಪೊಲೀಸರು, ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಸದ್ಯ ಆರೋಪಿ ಪೊಲೀಸ್ ವಶದಲ್ಲಿದ್ದು, ವಿಚಾರಣೆ ಮುಂದುವರಿದಿದೆ. ವಿಡಿಯೋ ಸೃಷ್ಟಿಸಿ ಹಂಚಿಕೊಳ್ಳಲು ಕಾರಣವೇನು? ಈ ಕೃತ್ಯದಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *