Greater Bengaluru News9 : ರಾಜ್ಯದಲ್ಲಿ ಕಳೆದ ಹಲವು ವರ್ಷಗಳಿಂದ ವಿಳಂಬವಾಗಿದ್ದ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಸಿದ್ಧತೆ ಆರಂಭವಾಗಿದೆ. 2022ರಿಂದ ಬಾಕಿ ಉಳಿದಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ 2027ರ ಜನವರಿಯಲ್ಲಿ ಮುಹೂರ್ತ ನಿಗದಿಯಾಗುವ ಸಾಧ್ಯತೆಯಿದೆ. ರಾಜ್ಯದ 1,101 ಜಿಲ್ಲಾ ಪಂಚಾಯಿತಿ ಹಾಗೂ 3,580 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಸರ್ಕಾರ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಈ ಮೂಲಕ ಗ್ರಾಮೀಣ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ, 2027ರ ಜನವರಿಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ ರಾಜ್ಯ ಚುನಾವಣಾ ಆಯೋಗ ಅಧಿಕೃತ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ 1,101 ಜಿಲ್ಲಾ ಪಂಚಾಯಿತಿ ಹಾಗೂ 234 ತಾಲೂಕು ಪಂಚಾಯಿತಿಗಳ ಒಟ್ಟು 3,580 ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಹೀಗಾಗಿ ಜನವರಿಯಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದ್ದಾರೆ.
ಇನ್ನು ಮತದಾರರ ಪಟ್ಟಿಯ ವಿಚಾರವಾಗಿ ಮಾತನಾಡಿದ ಅವರು, ಯಾವ ಮತದಾರರ ಪಟ್ಟಿಯನ್ನು ಬಳಸಬೇಕು ಎಂಬ ನಿರ್ಧಾರವನ್ನು ರಾಜ್ಯ ಚುನಾವಣಾ ಆಯೋಗ ಕೈಗೊಳ್ಳಲಿದೆ. ಹಳೆಯ ಮತದಾರರ ಪಟ್ಟಿಯನ್ನೇ ಬಳಸುವಂತೆ ಸರ್ಕಾರದ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಮುಂದಿನ ಪ್ರಕ್ರಿಯೆ ಚುನಾವಣಾ ಆಯೋಗದ ನಿರ್ಧಾರಕ್ಕೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.
2022ರಿಂದ ಚುನಾವಣೆ ವಿಳಂಬವಾಗಿದ್ದೇಕೆ?
ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ 2022ರಲ್ಲೇ ಮುಕ್ತಾಯಗೊಂಡಿದ್ದರೂ ಹಲವು ಕಾರಣಗಳಿಂದ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ. ಈ ನಡುವೆ ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲಾಗಿತ್ತು. ಕೆಲವು ಗ್ರಾಮೀಣ ಪ್ರದೇಶಗಳು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಯಾಗಿದ್ದವು. ಇದರಿಂದಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರು ವಿಂಗಡಿಸುವ ಅನಿವಾರ್ಯತೆ ಎದುರಾಗಿತ್ತು. ಹಿಂದಿನ ಸರ್ಕಾರದ ಅವಧಿಯಲ್ಲೇ ಚುನಾವಣೆ ನಡೆಯಬೇಕಿತ್ತಾದರೂ, ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ!
ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಸರ್ಕಾರದ ಜವಾಬ್ದಾರಿ ಪೂರ್ಣಗೊಂಡಿದೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದ್ದು, ರಾಜ್ಯ ಚುನಾವಣಾ ಆಯೋಗಕ್ಕೂ ಶಿಫಾರಸು ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ಚುನಾವಣೆಯ ದಿನಾಂಕ, ನೀತಿ ಸಂಹಿತೆ ಹಾಗೂ ಅಧಿಕೃತ ವೇಳಾಪಟ್ಟಿ ಪ್ರಕಟಿಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ ಮೇಲಿದೆ. ಆಯೋಗ ದಿನಾಂಕ ಪ್ರಕಟಿಸಿದ ಬಳಿಕ ಮತದಾನ ಪ್ರಕ್ರಿಯೆ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ.
ಸರ್ಕಾರ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿವೆ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿರುವ ಆಕಾಂಕ್ಷಿಗಳು ಟಿಕೆಟ್‌ಗಾಗಿ ತಮ್ಮ ತಮ್ಮ ನಾಯಕರನ್ನು ಸಂಪರ್ಕಿಸುತ್ತಿದ್ದಾರೆ. ಒಟ್ಟಿನಲ್ಲಿ, 2027ರ ಜನವರಿಯಲ್ಲಿ ನಡೆಯುವ ನಿರೀಕ್ಷೆಯಲ್ಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸುವ ಲಕ್ಷಣಗಳು ಕಾಣಿಸುತ್ತಿವೆ.

