Greater Bengaluru News9: ಕರ್ನಾಟಕದಲ್ಲಿ ಸ್ಮಾರ್ಟ್ ವಿದ್ಯುತ್ ಮೀಟರ್ಗಳ ಖರೀದಿ ಮತ್ತು ಅಳವಡಿಕೆ ಟೆಂಡರ್ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂಧನ ಸಚಿವ ಕೆಜೆ ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ದೂರಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕರ್ನಾಟಕ ಹೈಕೋರ್ಟ್ ಈ ಹಿಂದೆ ರದ್ದುಗೊಳಿಸಿದ್ದ ಕ್ರಿಮಿನಲ್ ದೂರನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಕೆ. ವಿನೋದ್ ಚಂದ್ರನ್ ಅವರಿದ್ದ ಪೀಠ, ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣ ಕಾಣುತ್ತಿಲ್ಲ ಎಂದು ಹೇಳಿದೆ.
ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರಾದ ಸಿ.ಎನ್. ಅಶ್ವತ್ಥ ನಾರಾಯಣ, ಎಸ್.ಆರ್. ವಿಶ್ವನಾಥ್ ಮತ್ತು ಧೀರಜ್ ಮುನಿರಾಜ್ ಅವರು ಕೆಜೆ ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಮೊದಲು ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿದ್ದ ಶಾಸಕರು, ಬಳಿಕ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಈ ದೂರಿನಲ್ಲಿ ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಹಾಗೂ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿತ್ತು. ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳು ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ಗಳನ್ನು ಉಲ್ಲೇಖಿಸಲಾಗಿತ್ತು.
ಹೈಕೋರ್ಟ್ನಲ್ಲಿ ಪ್ರಕರಣ ರದ್ದು
ಈ ಪ್ರಕರಣವನ್ನು ಪ್ರಶ್ನಿಸಿ ಕೆಜೆ ಜಾರ್ಜ್ ಹಾಗೂ ಬೆಸ್ಕಾಂ ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು. 2025ರ ಡಿಸೆಂಬರ್ನಲ್ಲಿ ಕರ್ನಾಟಕ ಹೈಕೋರ್ಟ್ ಕ್ರಿಮಿನಲ್ ಪ್ರಕ್ರಿಯೆಯನ್ನು ರದ್ದುಗೊಳಿಸಿತ್ತು.
ಟೆಂಡರ್ ನೀಡುವ ಸಂದರ್ಭದಲ್ಲಿ ಆರೋಪಿತರು ಹಣ ಪಡೆದಿದ್ದಾರೆ ಎಂಬುದು ದೂರುದಾರರ ಪ್ರಕರಣದಲ್ಲೇ ಇಲ್ಲ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಿದ್ದರೆ ಅದು ಬೇರೆ ರೀತಿಯ ಕಾನೂನು ಪರಿಹಾರದ ವಿಚಾರವಾಗಬಹುದು, ಆದರೆ ಅದರಿಂದ ಕ್ರಿಮಿನಲ್ ಅಪರಾಧವನ್ನು ನಿರ್ಧರಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿತ್ತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಿಜೆಪಿ ಶಾಸಕರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಕೂಡ ಆ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಕೆಜೆ ಜಾರ್ಜ್ ಹಾಗೂ ಸಂಬಂಧಿತ ಬೆಸ್ಕಾಂ ಅಧಿಕಾರಿಗಳಿಗೆ ಪ್ರಕರಣದಲ್ಲಿ ಕಾನೂನು ಪರಿಹಾರ ದೊರೆತಂತಾಗಿದೆ.

