ChatGPT Image Oct 3, 2026, 08_41_04 PM-modified
GREATER BENGALURU NEWS 9
Kempegowda

Greater Bengaluru News9 : ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಸಮಾಧಿ ಸ್ಥಳವನ್ನು ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ಕೆಂಪೇಗೌಡರ ಸಮಾಧಿ ಸ್ಥಳ ಹಾಗೂ ಇಡೀ ಗ್ರಾಮವನ್ನು ಪ್ರವಾಸಿ ತಾಣವಾಗಿ ಮಾರ್ಪಡಿಸಲು ನಿರ್ಧರಿಸಲಾಗಿದೆ.

ಈಗಾಗಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಈ ಗ್ರಾಮವನ್ನು ದತ್ತು ಪಡೆದಿದ್ದು, ಒಟ್ಟು 18 ಎಕರೆ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಿದೆ. ಡಿಸೆಂಬರ್ 14ರಂದು ಈ ಬೃಹತ್ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಕಾಮಗಾರಿಯ ಪೂರ್ವಭಾವಿಯಾಗಿ ಸಚಿವರು ಮತ್ತು ಹಿರಿಯ ಅಧಿಕಾರಿಗಳ ತಂಡವು ಕೆಂಪಾಪುರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದೆ. ಶಾಸಕ ಎಚ್.ಸಿ. ಬಾಲಕೃಷ್ಣ, ಮಾಜಿ ಸಂಸದ ಡಿ.ಕೆ. ಸುರೇಶ್, ಬಿಡಿಎ ಆಯುಕ್ತ ಮಣಿವಣ್ಣನ್ ಹಾಗೂ ಜಿಲ್ಲಾಧಿಕಾರಿ ಯಶವಂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಅಭಿವೃದ್ಧಿ ನೀಲನಕ್ಷೆಯ ಕುರಿತು ಪರಿಶೀಲಿಸಿದರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರವನ್ನು ಪ್ರಮುಖ ಪ್ರವಾಸಿ ಕೇಂದ್ರವಾಗಿ ರೂಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಆದರೆ, ಈ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಕೆಂಪಾಪುರ ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯೋಜನೆಗಾಗಿ ಈಗಾಗಲೇ 8 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಉಳಿದ 10 ಎಕರೆ ಭೂಸ್ವಾಧೀನಕ್ಕೆ ಮೊದಲ ಹಂತದ ಅಧಿಸೂಚನೆ (ನೋಟಿಫಿಕೇಶನ್) ಹೊರಡಿಸಲಾಗಿದೆ. ಹೆಚ್ಚುವರಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡುವಂತೆ ಹಾಗೂ ತಮ್ಮ ಸಮಸ್ಯೆಗಳಿಗೆ ಸ್ಪಂದಿಸುವಂತೆ ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವರು ಮತ್ತು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *